ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ

ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ

ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಬೀಳಗಿ ಸೂಚನೆ

ದಾವಣಗೆರೆ, ನ.6- ಪ್ರಸಕ್ತ ಸಾಲಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಸಲು ಸರ್ಕಾರ ಆದೇಶ ನೀಡಿದ್ದು, ರೈತರು ಮತ್ತು ಅಕ್ಕಿ ಗಿರಣಿಗಳ ನೋಂದಣಿ ಹಾಗೂ ಖರೀದಿ ಕೇಂದ್ರ ಪ್ರಾರಂಭಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೆಂಬಲ ಬೆಲೆಯಲ್ಲಿ ಭತ್ತ ಹಾಗೂ ಶೇಂಗಾ ಖರೀದಿಸುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‍ಗೆ 1,868 ರೂ.ಹಾಗೂ ಗ್ರೇಡ್-ಎ ಭತ್ತಕ್ಕೆ 1,888 ರೂ. ಬೆಂಬಲ ಬೆಲೆ ಘೋಷಿಸಲಾಗಿದೆ.  ಸಾಮಾನ್ಯ ಭತ್ತ ಪ್ರತಿ ರೈತರಿಂದ ಗರಿಷ್ಟ 40 ಕ್ವಿಂ. (ಪ್ರತಿ ಎಕರೆಗೆ 16 ಕ್ವಿಂ. ನಂತೆ) ಖರೀದಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಸಲು ದಾವಣಗೆರೆ ಜಿಲ್ಲೆಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವನ್ನು ಸಂಗ್ರಹಣಾ ಏಜೆನ್ಸಿಯಾಗಿ ನೇಮಿಸಲಾಗಿದೆ.  ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ನೋಂದಣಿ ಮಾಡಿದಂತಹ ರೈತರಿಂದ ಭತ್ತವನ್ನು, ನಿಗದಿತ ಅಕ್ಕಿ ಗಿರಣಿಗಳ ಮೂಲಕ ನೇರವಾಗಿ ಪಡೆದುಕೊಳ್ಳಲು ಸರ್ಕಾರ ತೀರ್ಮಾನಿಸಿದೆ.

 

ಸದ್ಯ ಮಾರುಕಟ್ಟೆಯಲ್ಲಿ ಭತ್ತಕ್ಕೆ ಬೆಂಬಲ ಬೆಲೆಗಿಂತಲೂ ಕಡಿಮೆ ದರ ಇದೆ.  ಹೀಗಾಗಿ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕೇಂದ್ರ ಪ್ರಾರಂಭ ಮಾಡುತ್ತಿರುವುದು ರೈತರಿಗೆ ಅನುಕೂಲವಾಗಲಿದೆ. ಭತ್ತ ಮಾರಾಟ ಮಾಡಬಯಸುವ ರೈತರು ಕೃಷಿ ಇಲಾಖೆ ಜಾರಿಗೊಳಿಸಿರುವ ಫ್ರೂಟ್ಸ್  ದತ್ತಾಂಶದಲ್ಲಿ ತಮ್ಮ ಹೆಸರು ನೋಂದಣಿ ಮಾಡಿಸಿರಬೇಕು.

 ಫ್ರೂಟ್ಸ್ ದತ್ತಾಂಶದಲ್ಲಿ ನೋಂದಣಿ ಆಗಿರದ ರೈತರಿಂದ ಭತ್ತ ಖರೀದಿಗೆ ಅವಕಾಶವಿಲ್ಲ. ಇದುವರೆಗೂ ನೋಂದಣಿ ಮಾಡಿಸದೇ ಇರುವ ರೈತರು ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ತೆರಳಿ ನೋಂದಣಿ ಮಾಡಿಸಲು ಅವಕಾಶವಿದೆ.  ಸರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿ ಕಾರ್ಯನಿರತವಾಗಿರುವ ಅಕ್ಕಿ ಗಿರಣಿಗಳನ್ನು ಭತ್ತ ಖರೀದಿ ಕಾರ್ಯಕ್ಕೆ ನೋಂದಾಯಿಸಿಕೊಳ್ಳಬೇಕಿದ್ದು, ನ. 20 ರಿಂದ 25 ರವರೆಗೆ ನೋಂದಣಿ ಮಾಡಿಕೊಳ್ಳಬೇಕು.  

ಭತ್ತ ಗುಣಮಟ್ಟ ಪರಿಶೀಲನೆಗೆ ಕೃಷಿ ಇಲಾಖೆ ಗ್ರೇಡರ್‍ಗಳನ್ನು ನಿಯೋಜಿಸಿ, ಇವರಿಗೆ ಸೂಕ್ತ ತರಬೇತಿ ನೀಡಬೇಕು.  ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಸಲು ರೈತರ ನೋಂದಣಿ ಕಾರ್ಯ ನ. 30 ರಿಂದ ಡಿ. 30 ರವರೆಗೆ ನಡೆಯಲಿದೆ.  ಭತ್ತ ಮಾರಾಟ ಮಾಡುವ ರೈತರಿಗೆ 3 ದಿನಗಳ ಒಳಗಾಗಿ ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೆಸ್ವಾಮಿ, ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್, ಕೆಒಎಫ್ ವ್ಯವಸ್ಥಾಪಕ ಹನುಮಂತ ನಾಯಕ್ ಹಾಗು ಇತರರು ಉಪಸ್ಥಿತರಿದ್ದರು.