ಮಕ್ಕಳನ್ನು ಉತ್ತಮ ಶಿಕ್ಷಣ, ಸಂಸ್ಕಾರದಿಂದ ಸತ್ಪ್ರಜೆಗಳನ್ನಾಗಿಸುವುದು ಶಿಕ್ಷಕರ ಕರ್ತವ್ಯ

ಮಕ್ಕಳನ್ನು ಉತ್ತಮ ಶಿಕ್ಷಣ, ಸಂಸ್ಕಾರದಿಂದ ಸತ್ಪ್ರಜೆಗಳನ್ನಾಗಿಸುವುದು ಶಿಕ್ಷಕರ ಕರ್ತವ್ಯ

ದಾವಣಗೆರೆ, ಸೆ.5- ಮಕ್ಕಳಿಗೆ ಶಿಕ್ಷಣದ ಜೊತೆಗೆ ಅವರಿಗೆ ಉತ್ತಮ ಸಂಸ್ಕಾರವನ್ನು ಕಲಿಸಿ, ದೇಶದ ಸತ್ಪ್ರಜೆಗಳನ್ನಾಗಿ ಮಾಡುವುದು ಶಿಕ್ಷಕರ ಕರ್ತವ್ಯ ಎಂದು ನಗರಾಭಿವೃದ್ಧಿ ಸಚಿವರೂ ಆಗಿರುವ  ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಡಾ.ಸರ್ವಪಲ್ಲಿ ರಾಧಾಕೃಷ್ಣ ನ್‍ರವರ ಜನ್ಮ ದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪುರ ಸ್ಕೃತರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಉತ್ತಮ ಜ್ಞಾನ ಪಡೆದ  ಮಗು ಸುಶಿಕ್ಷಿತ ಪ್ರಜೆಯಾಗಿ ರೂಪುಗೊಳ್ಳುವು ದರಲ್ಲಿ ಸಂದೇಹವಿಲ್ಲ. ಸತ್ಪ್ರಜೆಗಳಿಂದ ಕೂಡಿದ ದೇಶ ಸಂಪದ್ಭರಿತವಾಗಿ ಬೆಳೆಯುವುದಲ್ಲದೆ, ಇತರೆ ದೇಶಗಳಿಗೂ ಮಾದರಿಯಾಗು ವುದು ಎಂದು ಹೇಳಿದರು.

ಡಾ.ಸರ್ವಪಲ್ಲಿ ರಾಧಾಕೃಷ್ಣನ್  ಅವರು ಓರ್ವ ಶಿಕ್ಷಕರಾಗಿ, ಶಿಕ್ಷಣ ತಜ್ಞ ರಾಗಿ, ತತ್ವಜ್ಞಾನಿ ಯಾಗಿ, ರಾಜ ಕಾರಣಿ ಯಾಗಿ ಸ್ವಾತಂತ್ರ್ಯ ನಂತರ ಭಾರತದ ಮೊದಲ ಉಪರಾಷ್ಟ್ರಪತಿಯಾಗಿ, ಎರಡನೇ ರಾಷ್ಟ್ರಪತಿಯಾಗಿ ಬಹು ಎತ್ತರದ ಹುದ್ದೆಯನ್ನು ಅಲಂಕರಿಸಿದರೂ ಅವರ ಆಸಕ್ತಿ ಇದ್ದದ್ದು ಶಿಕ್ಷಣ ಕ್ಷೇತ್ರಕ್ಕೆ. ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಅಪಾರವಾದದ್ದು ಎಂದು ಬಣ್ಣಿಸಿದರು.

ಜಿಲ್ಲಾ ಉಸ್ತುವಾರಿ ಸಚಿವನಾಗಿ ಜಿಲ್ಲೆಗೆ ಹಲವು ಬಾರಿ ಭೇಟಿ ನೀಡಿ ಪ್ರತಿ ತಾಲ್ಲೂಕುಗಳಿಗೆ ಪ್ರವಾಸ ಕೈಗೊಂಡಿದ್ದು, ಜಿಲ್ಲೆಯ ಪರಿಚಯ ನನಗಿದೆ. ಇಲ್ಲಿ ಹೆಚ್ಚಾಗಿ ರೈತಾಪಿ ವರ್ಗದವರು ಇದ್ದಾರೆ. ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಎಸ್.ಎ.ರವೀಂದ್ರನಾಥ್ ಮಾತನಾಡಿ, ಶಿಕ್ಷಕರ ವೃತ್ತಿ ಮಾಡಿದವರ ಪೈಕಿ ಹೆಚ್ಚು ಜನ ಇಂದು ಉನ್ನತ ಮಟ್ಟದ ಅಧಿಕಾರದಲ್ಲಿದ್ದು ಗ್ರಾಮೀಣ ಭಾಗದ ಶಾಲೆಗಳಲ್ಲಿ ಇಂದಿಗೂ ಶೌಚಾಲಯ, ನೀರಿನ ಸಮಸ್ಯೆಯಿದೆ. ಅಂತಹ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಹೇಳಿದರು.

ಕೋವಿಡ್‌ನಿಂದಾಗಿ ಕಳೆದ ಒಂದೂವರೆ ವರ್ಷದಿಂದ ಮಕ್ಕಳು ಪುಸ್ತಕ ಹಿಡಿದಿಲ್ಲ. ಇಂತಹ ವೇಳೆ ಶಿಕ್ಷಕರು ಶ್ರಮವಹಿಸಿ ಶಿಕ್ಷಣ ನೀಡಬೇಕು. ಮುಂದೆ ವಿದ್ಯಾರ್ಥಿಗಳು ಉನ್ನತ ಹುದ್ದೆಗಳಿಗೆ ಏರಿದಾಗ ನಿಮ್ಮನ್ನು ಸ್ಮರಿಸುತ್ತಾರೆ ಎಂದು ಕಿವಿ ಮಾತು ಹೇಳಿದರು.

ಪಾಲಿಕೆ ಮೇಯರ್ ಎಸ್.ಟಿ.ವೀರೇಶ್ ಮಾತನಾಡಿ, ಸಾವಿರಾರು ವರ್ಷಗಳ ಇತಿಹಾಸ ಇರುವ ಭಾರತ ತನ್ನ ಸಂಸ್ಕೃತಿಯಿಂದ ಇಡೀ ವಿಶ್ವಕ್ಕೇ ದಾರಿದೀಪವಾಗಿದೆ. ಮನುಕುಲಕ್ಕೆ ಬೇಕಾದ ಸಂಸ್ಕಾರ, ಸಂಸ್ಕೃತಿಯನ್ನು ನೀಡಿರುವ ಭಾರತದಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯವಾದದ್ದು. ಸ್ವಾತಂತ್ರ್ಯ ಹೋರಾಟಗಾರರಿಗೆ ಪ್ರೇರಣೆ ನೀಡಿ ಸ್ವಾತಂತ್ರ್ಯ ದೊರಕಿಸಿಕೊಡುವಲ್ಲಿ ಹಾಗೂ ಸ್ವಾತಂತ್ರ್ಯ ಬಂದ ನಂತರವೂ ದೇಶ, ಸಮಾಜ ಕಟ್ಟುವ ಕಾರ್ಯದಲ್ಲಿ ತೊಡಗಿದ್ದಾರೆ. ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಶಿಕ್ಷಕರ ಪಾತ್ರ ಅಪಾರವಾದದ್ದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಪ್ರಾಥಮಿಕ ಶಾಲಾ ವಿಭಾಗದಿಂದ 14 ಮತ್ತು ಪ್ರೌಢಶಾಲಾ ವಿಭಾಗದಿಂದ 7 ಜನ ಶಿಕ್ಷಕರು ಸೇರಿದಂತೆ ಒಟ್ಟು 21 ಜನ ಶಿಕ್ಷಕರಿಗೆ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಾಯಿತು.

 ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿ.ಪಂ.ಸಿಇಒ ಡಾ.ವಿಜಯಮಹಾಂತೇಶ ದಾನಮ್ಮನವರ್, ಪಾಲಿಕೆ ಸದಸ್ಯೆ ಗೀತಾ ದಿಳ್ಯಪ್ಪ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್., ಪಾಲಿಕೆ ಆಯುಕ್ತ ವಿಶ್ವನಾಥ ಮುದ್ದಜ್ಜಿ, ಡಿಡಿಪಿಐ (ಅಭಿವೃದ್ಧಿ) ಹೆಚ್.ಕೆ. ಲಿಂಗರಾಜು, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಪಾಲಾಕ್ಷಿ, ಉಪವಿಭಾಗಾಧಿಕಾರಿ ಮಮತ ಹೊಸಗೌಡರ್, ತಹಶೀಲ್ದಾರ್ ಗಿರೀಶ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜಿ.ಕೊಟ್ರೇಶ್, ಎಂ.ನಿರಂಜನಮೂರ್ತಿ ಇತರರು ಉಪಸ್ಥಿತರಿದ್ದರು. ಡಿಡಿಪಿಐ ಸಿ.ಆರ್. ಪರಮೇಶ್ವರಪ್ಪ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.