ಗ್ರಾ.ಪಂ ಚುನಾವಣೆ : ಜಿಲ್ಲೆಯಲ್ಲಿ ಕಾಂಗ್ರೆಸ್ ಬೆಂಬಲಿತರು ಅಧಿಕ ಸಂಖ್ಯೆಯಲ್ಲಿ ಗೆಲುವು

ದಾವಣಗೆರೆ, ಡಿ.31- ಜಿಲ್ಲೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅಧಿಕ ಸಂಖ್ಯೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಡಿ.ಬಸವರಾಜ್ ಅಭಿಪ್ರಾಯ ಪಟ್ಟಿದ್ದಾರೆ. 

ಕಾಂಗ್ರೆಸ್ ಬೆಂಬಲಿತರ ಗೆಲುವಿಗೆ ಮತದಾನ ಮಾಡಿದ ಮತದಾರರಿಗೆ, ಪಕ್ಷದ ಕಾರ್ಯಕರ್ತರಿಗೆ, ಮುಖಂಡರಿಗೆ ಅವರು ಅಭಿನಂದನೆ ಸಲ್ಲಿಸಿದ್ದಾರೆ. 

ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಯೋಜನೆಗಳಾದ ರಾಷ್ಟ್ರೀಯ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ, ಸಿದ್ದರಾಮಯ್ಯ ಸರ್ಕಾರದ ಜನಪರ ಯೋಜನೆಗಳಾದ ಅನ್ನ ಭಾಗ್ಯ, ರೈತ ಭಾಗ್ಯ ಸೇರಿದಂತೆ ನೂರಾರು ಅಭಿವೃದ್ಧಿ ಪರ ಯೋಜನೆಗಳನ್ನು ಗುರುತಿಸಿ ಗ್ರಾಮೀಣರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ. 

ರಾಜ್ಯ ಮತ್ತು ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ರೈತ ವಿರೋಧಿ ಕಾಯ್ದೆಗಳಾದ ಭೂ ಸುಧಾರಣೆ ಕಾಯ್ದೆ, ಕೃಷಿ ಮಾರುಕಟ್ಟೆ, ಕಾರ್ಮಿಕ ವಿರೋಧಿ ಕಾಯ್ದೆಗಳ ವಿರುದ್ದವಾಗಿ ಗ್ರಾಮೀಣ ಪ್ರದೇಶದ ಜನತೆ ಮತದಾನ ಮಾಡಿದ್ದಾರೆ. ಈ ಫಲಿತಾಂಶ ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿ ವಿರುದ್ಧ ಜನ ನೀಡಿದ ತೀರ್ಪು ಆಗಿದೆ ಎಂದು ಅವರು ಹೇಳಿದ್ದಾರೆ. 

ಗೆಲುವು ಸಾಧಿಸಿದ ಗ್ರಾಮ ಪಂಚಾಯತ್ ಸದಸ್ಯರು ಬರಲಿರುವ ದಿನಗಳಲ್ಲಿ ಮತದಾರರು ತಮ್ಮ ಮೇಲಿಟ್ಟಿರುವ ವಿಶ್ವಾಸವನ್ನು ಉಳಿಸಿ ಗ್ರಾಮಾಭಿವೃದ್ಧಿಯಲ್ಲಿ ತೊಡಗುವ ಮೂಲಕ ಪಂಚಾಯತ್ ರಾಜ್  ವ್ಯವಸ್ಥೆ ಸದೃಢಗೊಳ್ಳುವಂತಾಗಲಿ ಎಂದು ನೂತನ ಸದಸ್ಯರಿಗೆ ಡಿ.ಬಸವರಾಜ್ ಹಾರೈಸಿದ್ದಾರೆ.